ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 183 ಕೋಟಿ ರೂಪಾಯಿಯ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ನಡುವೆ ಇಂದು ಬೆಳ್ಳಂ ಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಅವರ ಮನೆ, ಕಚೇರಿ ಹಾಗೂ ಆಸ್ತಿಗಳ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದರು.
ಪರಿಶೀಲನೆ ವೇಳೆ ನಾಗೇಂದ್ರ ಅವರ ಪಿಎ ಹರೀಶ್ ಅವರು ಆರೋಪಿ ಸತ್ಯನಾರಾಯಣ್ ಅವರಿಂದ ಪಡೆದಿದ್ದ ಹಣದಲ್ಲಿ 25 ಲಕ್ಷ ರೂ. ತಾನು ಪಡೆದ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಮುಂದುವರಿಸಿ ನಾಗೇಂದ್ರ ಅವರನ್ನೂ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ, ಮಲ್ಲೇಶ್ವರಂ ಸೇರಿದಂತೆ ನಾಗೇಂದ್ರ ಅವರ ನಾಲ್ಕು ಕಡೆಯ ಆಸ್ತಿ, ಬಳ್ಳಾರಿ ಸೇರಿದಂತೆ ಇತರೆಡೆ ದಾಳಿ ಮಾಡಲಾಗಿದೆ. ಈ ವೇಳೆ ಯೂನಿಯನ್ ಬ್ಯಾಂಕಿನ ಇಬ್ಬರು ಅಧಿಕಾರಿಗಳ ಮನೆಗಳ ಮೇಲೂ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.