ಬೆಂಗಳೂರು: ಈ ಬಾರಿಯ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಬೇಕೆಂಬ ಆಸೆಯೊಂದಿಗೆ ಬಾಡಿಗೆ ಕಾರಿನಲ್ಲಿ ಬರುತ್ತಿದ್ದ ಯುವತಿಯೊಬ್ಬಳಿಗೆ ಯಮರಾಯ ಕಾಡಿದ್ದಾನೆ.
ಬೆಂಗಳೂರಿನ ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಕಾರು ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ನಾಗಾರ್ಜುನ ಕಾಲೇಜಿನ ಬಳಿಗೆ ಬರುತ್ತಿದ್ದಂತೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕನ ಎಡಭಾಗದಲ್ಲಿ ಕುಳಿತಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾಳೆ. ಘಟನೆಯನ್ನು ಕಂಡ ಚಾಲಕ ನಿಶ್ವಾಂತ್, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸವನ್ನೂ ಮಾಡದೆ, ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯ ನಿವಾಸಿ ರಕ್ಷಿತಾ ಎಂದು ಹೇಳಲಾಗಿದೆ. ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.